ಶಿರಾ:- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯಲ್ಲಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಲು ಜವಳಿ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.
ಅವರು ಶಿರಾ ತಾಲ್ಲೂಕಿನ ಹಂದಿಕುಂಟೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹುಲಿಕುಂಟೆ ಹೋಬಳಿಗೆ ಕಳೆದ ಐದು ವರ್ಷದಲ್ಲಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಭಾವನೆಯಿಂದ ನೋಡಲಾಗಿದೆ ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ನೀಲನಕ್ಷೆ ರೂಪಿಸಿದ್ದೇನೆ ಎಂದು ಹೇಳಿದರು.
ಹುಲಿಕುಂಟೆ, ಗೌಡಗೆರೆ ಹಾಗೂ ಕಸಬಾ ಹೋಬಳಿಯನ್ನು ಪುನರ್ ವಿಂಗಡನೆ ಮಾಡಿ ಹೊಸದಾಗಿ ಎರಡು ಹೋಬಳಿಗಳನ್ನು ರಚಿಸುವುದಾಗಿ ಹೇಳಿದರು.
ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಮಾತನಾಡಿ ಮುಂದಿನ ಚುನಾವಣೆಯಲ್ಲಿ ಟಿ.ಬಿ.ಜಯಚಂದ್ರ ಅವರನ್ನು ಗೆಲ್ಲಿಸಿದರೆ ಸಚಿವರಾಗಿ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಯೋಜನೆಗಳು ಬರಲಿದೆ ಎಂದ ಅವರು ಬಿಜೆಪಿ ಬರೀ ಪೊಳ್ಳು ಭರವಸೆಯನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುತ್ತದೆ ಎಂದರು.
ಇದೇ ಸಂದರ್ಭದಲ್ಲಿ , ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಅರ್.ಮಂಜುನಾಥ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬರಗೂರು ನಟರಾಜ್,ಯುವ ಮುಖಂಡ ಮಧುಸೂದನ್ ಸೇರಿದಂತೆ ಮತ್ತಿತರರು ಇದ್ದರು.
ವರದಿ ಶಿರಾ ಶ್ರೀಮಂತ್